ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ಹಾಗೂ ಉಮೇಶ್ ಕತ್ತಿ ಅವರ ನೆನಪಿನಲ್ಲಿ ಬೆಳಗಾವಿಯನ್ನು ರಾಜಧಾನಿಯನ್ನಾಗಿ ಮಾಡಬೇಕು ಎಂಬ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆ ಇದೀಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಅಂತಹ ಆಸೆಗಳಿದ್ದರೂ ಕರ್ನಾಟಕ ಒಂದಾಗಿ ಇರಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಹಾಗೂ ಬೆಳಗಾವಿಯನ್ನು ರಾಜಧಾನಿಯನ್ನಾಗಿ ಮಾಡಬೇಕೆಂಬ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಖಂಡಿತವಾಗಿಯೂ ಅಂತಹ ಆಸೆಗಳಿವೆ, ಆದರೆ ಕರ್ನಾಟಕ ಹೀಗೆಯೇ ಅಖಂಡವಾಗಿ ಒಂದಾಗಿರಬೇಕು ಎಂಬುದು ಎಲ್ಲರ ಆಸೆಯಾಗಿದೆ ಎಂದಿದ್ದಾರೆ. ಇನ್ನು ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಮಾತನಾಡಿದ ಅವರು, ಅಥಣಿಯನ್ನು ಜಿಲ್ಲೆ ಮಾಡಬೇಕೆಂಬ ಲಕ್ಷ್ಮಣ ಸವದಿ ಅವರ ಬೇಡಿಕೆಯಂತೆ ಚಿಕ್ಕೋಡಿ ಹಾಗೂ ಗೋಕಾಕ್ ಭಾಗದ ಜನರಿಗೂ ಪ್ರತ್ಯೇಕ ಜಿಲ್ಲೆಯ ಆಕಾಂಕ್ಷೆಗಳಿವೆ. ಅಂತಿಮವಾಗಿ ಈ ಬಗ್ಗೆ ಸರ್ಕಾರವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ತಾಲೂಕು ಆಸ್ಪತ್ರೆಗಳಲ್ಲಿನ ವೈದ್ಯರ ವರ್ಗಾವಣೆ ಹಾಗೂ ಔಷಧಿಗಳ ಕೊರತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವೆಡೆ ವೈದ್ಯರ ವರ್ಗಾವಣೆಯಿಂದ ಸಮಸ್ಯೆಗಳಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಆಸ್ಪತ್ರೆಗಳಲ್ಲಿ ಉತ್ತಮ ಕಟ್ಟಡ ಮತ್ತು ಮೂಲಭೂತ ಸೌಕರ್ಯಗಳಿದ್ದರೂ ಔಷಧಿಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಇಂದೇ ಸಂಬಂಧಪಟ್ಟ ತಾಲೂಕು ಅಧಿಕಾರಿಗಳೊಂದಿಗೆ ಚರ್ಚಿಸಿ, ಔಷಧಿ ಕೊರತೆಯನ್ನು ತಕ್ಷಣವೇ ಸರಿಪಡಿಸಲು ಕಟ್ಟುನಿಟ್ಟಿನ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಮತ್ತೊಂದೆಡೆ ನವೆಂಬರ್ 26ರ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ಸತೀಶ್ ಜಾರಕಿಹೊಳಿ ಖಚಿತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಮಹಾದೇವಪ್ಪ ನಡುವಿನ ಮುನಿಸಿನ ಕುರಿತು ಪ್ರತಿಕ್ರಿಯಿಸಿ, ನಾಳಿನ ಕಾರ್ಯಕ್ರಮದಲ್ಲಿ ನಾವೆಲ್ಲರೂ ಒಟ್ಟಾಗಿ ಭಾಗವಹಿಸುತ್ತೇವೆ ಎನ್ನುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇನ್ನು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದತಿ ಕುರಿತ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಅದು ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
