ಬೆಳಗಾವಿ ನಗರದಿಂದ ಕಣಬರಗಿ ಗ್ರಾಮಕ್ಕೆ ಸಮರ್ಪಕ ಸಾರಿಗೆ ಬಸ್ ಸೌಲಭ್ಯವಿಲ್ಲದೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದ್ದು, ಸಾರಿಗೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸುಮಾರು 25 ಸಾವಿರ ಜನಸಂಖ್ಯೆ ಹೊಂದಿರುವ ಕಣಬರಗಿ ಗ್ರಾಮಕ್ಕೆ ಕೆಲವು ವರ್ಷಗಳ ಹಿಂದೆ ಎರಡು ಬಸ್ಗಳು ನಿಯಮಿತವಾಗಿ ಸಂಚರಿಸುತ್ತಿದ್ದವು. ಆದರೆ, ಕಳೆದ ಒಂದು ವರ್ಷದಿಂದ ಒಂದೇ ಒಂದು ಬಸ್ ಕೂಡ ಸರಿಯಾಗಿ ಸಂಚರಿಸುತ್ತಿಲ್ಲ. ಇದರಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಬಸ್ ನಿಲ್ದಾಣದಲ್ಲಿ ಕಾದು ನಿಲ್ಲುವಂತಾಗಿದ್ದು, ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಹಲವು ಬಾರಿ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಸಂಬಂಧಪಟ್ಟ ಸರ್ಕಾರ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕಣಬರಗಿ ಗ್ರಾಮಕ್ಕೆ ನಿಯಮಿತವಾಗಿ ಬಸ್ ಸಂಚಾರ ಆರಂಭಿಸಬೇಕೆಂದು ಸ್ಥಳೀಯರಾದ ಕಿಸನ್ ಸುಂಠಕರ ಮಾಧ್ಯಮಗಳ ಮೂಲಕ ಆಗ್ರಹಿಸಿದ್ದಾರೆ.
