ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಕನಕದಾಸರ ಜಯಂತಿ ಪೂಜಾ ಕಾರ್ಯಕ್ರಮಕ್ಕೆ ಅಧಿಕಾರಿಗಳೇ ಗೈರಾಗುವ ಮೂಲಕ ತೀವ್ರ ಮುಜುಗರಕ್ಕೆ ಕಾರಣರಾಗಿದ್ದಾರೆ. ಸಮಾಜ ಬಂಧುಗಳು ಹಾಗೂ ಮಾಜಿ ಶಾಸಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಅಧಿಕಾರಿಗಳು ಸುಳಿಯದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕನಕದಾಸರ ಜಯಂತಿ ಪೂಜಾ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರುಹಾಜರಾಗಿ ಬೇಜವಾಬ್ದಾರಿತನ ಮೆರೆದಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಬಂಧುಗಳೊಂದಿಗೆ ಭಾಗಿಯಾಗಿದ್ದ ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ ಹಾಗೂ ಆನಂದ್ ನ್ಯಾಮಗೌಡ ಅವರು ಅಧಿಕಾರಿಗಳ ಈ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು. “ನಾನು ಕೂಡ ಕಾರ್ಯಕ್ರಮಕ್ಕೆ ಬರುತ್ತಿರಲಿಲ್ಲ, ಅಷ್ಟರಲ್ಲೇ ಬಂದುಬಿಟ್ಟೆ” ಎಂದು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಜಮಖಂಡಿ ತಹಶೀಲ್ದಾರ್ ಬಡಿಗೇರ್ ಅವರು ಕಾರ್ಯಕ್ರಮದಲ್ಲಿ ನೆರೆದಿದ್ದ ಸಾರ್ವಜನಿಕರು ಹಾಗೂ ಸಮಾಜ ಬಂಧುಗಳಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದರು. ಅಲ್ಲದೆ, ಮುಂದೆ ನಡೆಯುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿಯೂ ಅಧಿಕಾರಿಗಳು ಗೈರಾಗದಂತೆ ಎಚ್ಚರ ವಹಿಸಲಾಗುವುದು ಮತ್ತು ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಎಲ್ಲರೂ ಕಡ್ಡಾಯವಾಗಿ ಹಾಜರಿರುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವುದಾಗಿ ತಹಶೀಲ್ದಾರ್ ಭರವಸೆ ನೀಡಿದರು.
