ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಪ್ರಮುಖ ಪಕ್ಷಗಳಿಂದ ಅಭ್ಯರ್ಥಿಗಳು ಯಾರು ಎಂಬ ಕುತೂಹಲ ಗರಿಗೆದರಿದೆ. ಈ ನಡುವೆ ಬೆಂಗಳೂರಿನ ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ನಡೆದ ಹಿರಿಯ ನಾಯಕರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ವರಿಷ್ಠರ ಒಪ್ಪಿಗೆ ಸಿಗುವುದೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳ ಹುಡುಕಾಟ ಬಹುತೇಕ ಮುಗಿದಿದೆ. ಬೆಂಗಳೂರಿನ ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ನಡೆದ ಹಿರಿಯ ನಾಯಕರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜು ಹಟ್ಟಿಹೊಳಿ ಹೆಸರು ಈ ಪಟ್ಟಿಯಲ್ಲಿವೆ. ಇನ್ನು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ನಿಚ್ಚಳ ಎಂದೂ ಹೇಳಲಾಗುತ್ತಿದೆ.
ನಾನು ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಈ ಮೊದಲು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದರು.
ಆದರೆ ರೇಸ್‍ನಲ್ಲಿ ಅವರ ಹೆಸರು ಮುಂಚೂಣಿಯಲ್ಲಿದೆ. ನಾವು ಕೇಂದ್ರ ನಾಯಕರಿಗೆ ಹೆಸರುಗಳನ್ನು ಕಳುಹಿಸುತ್ತೇವೆ. ಅಂತಿಮ ನಿರ್ಧಾರ ಅವರದು ಎಂದು ರಾಜ್ಯದ ಕಾಂಗ್ರೆಸ್ ವರಿಷ್ಠರು ಹೇಳುತ್ತಿದ್ದಾರೆ.